SHARE

ಬೆಂಗಳೂರು: ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಕೂಡಲಸಂಗಮದ ಬಸವ ಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಇಂದು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮಧುಮೇಹ, ರಕ್ತದೊತ್ತಡ, ಕಿಡ್ನಿವೈಫಲ್ಯ, ಮೂತ್ರಕೋಶ ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು, ಕಳೆದೊಂದು ವಾರದಿಂದ ಬೆಂಗಳೂರಿನ ಎಚ್​ಎಎಲ್​ ರಸ್ತೆಯ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

1946ರ ಮಾರ್ಚ್ 13ರಂದು. ಚಿತ್ರದುರ್ಗ ಜಿಲ್ಲೆಯ ಸಾಸಲಹಟ್ಟಿಯಲ್ಲಿ ಜನಿಸಿದ್ದ ಅವರು, ಲಿಂಗಾನಂದ ಮಹಾಸ್ವಾಮಿಗಳಿಂದ ಇಷ್ಟಲಿಂಗ ಧೀಕ್ಷೆ ಪಡೆದು, ಪ್ರಥಮ ಮಹಿಳಾ ಜಗದ್ಗುರು ಎಂಬ ಖ್ಯಾತಿಗೆ ಪಾತ್ರರಾಗಿದ್ದರು.

ಧಾರವಾಡದಲ್ಲಿ ಅಕ್ಕಮಹಾದೇವಿ ಆಶ್ರಮ ಸ್ಥಾಪನೆ, ಮೊದಲ ಮಹಿಳಾ ಜಗದ್ಗುರು ಪೀಠ ಸ್ಥಾಪನೆ, ಕುಂಬಳಗೋಡಿನಲ್ಲಿ ಬಸವ ಗಂಗೋತ್ರಿ ಆಶ್ರಮ, ರಾಜಾಜಿನಗರದಲ್ಲಿ ಬಸವ ಮಂಟಪ ಸ್ಥಾಪನೆ ಮಾಡಿ ಬಸವ ತತ್ವ ಪ್ರಸಾರ ಮಾಡುತ್ತಿದ್ದರು.

ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು ಮುನ್ನಲೆಗೆ ಬಂದಾಗ ಹೋರಾಟದ ನೇತೃತ್ವ ವಹಿಸಿದ್ದ ಮಾತೆ ಮಹಾದೇವಿ. ಲಿಂಗಾಯತ ಪ್ರತ್ಯೇಕ ಧರ್ಮದ ಸ್ಥಾನಮಾನ ಪಡೆಯುವವರೆಗೂ ಹೋರಾಟ ನಡೆಸುವುದಾಗಿ ಹೇಳಿದ್ದರು. ದೆಹಲಿಯಲ್ಲೂ ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಪ್ರತಿಭಟನೆಗಳಲ್ಲಿ ಭಾಗಿಯಾಗಿದ್ದರು.